ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಅಸಂಘಟಿತ ಕಾರ್ಮಿಕರ ಸಂಘ ಬೆಂಬಲ
ಶಿವಮೊಗ್ಗ: ಆಶಾ ಕಾರ್ಯಕರ್ತೆಯರಿಗೆ ಸರ್ಕಾರ ನೀಡಬೇಕಾದ ಗೌರವಧನ ಮತ್ತು ಪ್ರೋತ್ಸಾಹಧನವನ್ನು ಹೆಚ್ಚಿಸುವಂತೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ಅವರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೀಡುತ್ತಿರುವ ಗೌರವಧನ ಮತ್ತು ಪ್ರೋತ್ಸಾಹಧನವನ್ನು ಸರಿಯಾದ ಸಮಯಕ್ಕೆ ನೀಡದೆ ಸತಾಯಿಸಲಾಗುತ್ತಿದೆ. ಪ್ರಸ್ತುತ ಅವರು ಕೇಳುತ್ತಿರುವ ಬೇಡಿಕೆಗಳನ್ನು ಈಡೇರಿಸದೆ ಬೇಜವಾಬ್ದಾರಿಯುತ ನೀತಿಯನ್ನು ಅನುಸರಿಸುತ್ತಿರುವುದನ್ನು ಸಂಘ ಖಂಡಿಸಿದೆ.
ರಾಜ್ಯದಲ್ಲಿ ಪ್ರಸ್ತುತ 41 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಸರ್ಕಾರದ ವಿವಿಧ ಆರೋಗ್ಯ ಸೇವೆಗಳ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಮುಖ್ಯವಾಗಿ ಅಂತರರಾಷ್ಟ್ರೀಯ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಲ್ಲಿ ಅವರ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಶ್ರಮಿಕ ವರ್ಗದವರು ಕೇಳುತ್ತಿರುವ ಕನಿಷ್ಠ ಬೇಡಿಕೆಯಾದ 15,000 ರೂ. ಗೌರವಧನವನ್ನು ಸರ್ಕಾರ ನೀಡಲೇಬೇಕು ಎಂದು ಸಂಘ ಒತ್ತಾಯಿಸಿದೆ.
ಚುನಾವಣಾ ಕಾರ್ಯ, ಆರೋಗ್ಯ, ಶಿಕ್ಷಣ, ಮಹಿಳಾ ಸುರಕ್ಷತೆ ಸೇರಿದಂತೆ ವಿವಿಧ ಕಾರ್ಯಗಳನ್ನು ನಿರ್ವಹಿಸಲು ಆಶಾ ಕಾರ್ಯಕರ್ತೆಯರ ಅಗತ್ಯವಿದೆ. ಆದ್ದರಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಂಟಿಯಾಗಿ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ತಕ್ಷಣ ಈಡೇರಿಸಬೇಕು ಎಂದು ಆಗ್ರಹಿಸಲಾಗಿದೆ.
ತಕ್ಷಣ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘವೂ ಬೀದಿಗಿಳಿದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ. ಆಶಾ ಕಾರ್ಯಕರ್ತೆಯರ ನ್ಯಾಯಯುತ ಹೋರಾಟಕ್ಕೆ ಸಂಘ ಬೆಂಬಲ ವ್ಯಕ್ತಪಡಿಸಿದ್ದು, ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಸಂಘದ ಸಂಸ್ಥಾಪಕ ಕುಬೇಂದ್ರ ಆಯನೂರು, ರಾಜ್ಯಾಧ್ಯಕ್ಷ ಪ್ರದೀಪ್ ಹೊನ್ನಪ್ಪ, ರಾಜ್ಯ ಉಪಾಧ್ಯಕ್ಷೆ ಸುರೇಖಾ ಪಾಲಾಕ್ಷಪ್ಪ, ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಮಮತಾ ರಾಘವೇಂದ್ರ, ಕಾನೂನು ಸಲಹೆಗಾರ ಚೇತನ್ ಲಕ್ಷ್ಮಪ್ಪ, ರಾಜ್ಯ ಖಜಾಂಚಿ ಶಶಿಕುಮಾರ್, ಜಿಲ್ಲಾಧ್ಯಕ್ಷ ರಮೇಶ್ ಮಡಿವಾಳ ಬಂಡಗದ್ದೆ, ಮಹಾನಗರ ಅಧ್ಯಕ್ಷ ವೈ. ಚಂದ್ರಶೇಖರ್, ತಾಲೂಕು ಅಧ್ಯಕ್ಷರಾದ ರಾಘವೇಂದ್ರ ಕಲ್ಲುಕೊಪ್ಪ, ಗಣಪತಿ ತಾಳಗುಪ್ಪ, ರಾಜೇಶ್ ಶೆಟ್, ಮಂಜಪ್ಪ ಮೇಲಿನ ಹನಸವಾಡಿ, ಸುರೇಶ್ ಗಾಮ, ಸಂದೀಪ್ ಮಳಲಗದ್ದೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

