ಎಫ್ಬಿಟಿ ಆಪ್ ನಿಂದ ವಂಚನೆ ಆರೋಪ: ಸಿಐಡಿ ತನಿಖೆಗೆ ಆಗ್ರಹ
ಶಿವಮೊಗ್ಗ: ಎಫ್ಬಿಟಿ (FBT) ಆಪ್ ನಲ್ಲಿ ಹೂಡಿಕೆ ಮಾಡಿ ಹಣ ಕಳೆದುಕೊಂಡಿರುವ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಜೈ ಕನ್ನಡಾಂಬೆ ಮಹಾಸೇನೆ ಜಿಲ್ಲಾ ಘಟಕ ಅಧ್ಯಕ್ಷ ಎಚ್.ಆರ್. ನಂಜುಂಡಪ್ಪ ಆಗ್ರಹಿಸಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಪ್ನಲ್ಲಿ ಹೂಡಿಕೆ ಮಾಡಿದ ಶಿವಮೊಗ್ಗ ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳ ರೈತರು, ಮಹಿಳೆಯರು, ಪಿಂಚಣಿದಾರರು, ವೃದ್ಧರು, ವಿಧವೆಯರು ಹಾಗೂ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೆಲವರು ಒಡವೆ ಅಡವಿಟ್ಟು, ಕೈಬಡ್ಡಿಗೆ ಸಾಲ ಪಡೆದು ಲಕ್ಷಾಂತರ ರೂಪಾಯಿ ಹೂಡಿಕೆ ಮಾಡಿದ್ದಾರೆ. ಹಣ ಕಳೆದುಕೊಂಡವರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.
ಈ ಕುರಿತು ಅ. 8ರಂದು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ರಾಜ್ಯ ಗೃಹ ಇಲಾಖೆಗೆ ಮನವಿ ಸಲ್ಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲ ಪೊಲೀಸ್ ಠಾಣೆಯಲ್ಲಿ ಕೆಲವರ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಕೆಲವರನ್ನು ಬಂಧಿಸಲಾಗಿದೆ. ಆದರೆ, ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಿರುವ ಕೆಲವರನ್ನು ಬಂಧಿಸಿಲ್ಲ ಎಂದು ಆರೋಪಿಸಿದರು.
ಪ್ರಕರಣದ ತನಿಖೆಯ ಬಗ್ಗೆ ಅನುಮಾನ ಗಳಿರುವುದರಿಂದ ಸಿಐಡಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಕಾರ್ಯದರ್ಶಿ ರಮೇಶ್, ನಾಗೇಶ್, ರಮೇಶ್, ವೀರೇಶ್, ರಂಗಪ್ಪ, ಪರಮಶಿವಪ್ಪ ಇದ್ದರು.

